ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ, ಬಿಡುಗಡೆ
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಹತ್ಯೆ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಪ್ರಕರಣ ಸಂಬಂಧಿಸಿದಂತೆ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಸಚಿವ ಪ್ರಯಾಂಕ್ ಖರ್ಗೆ ಅವರ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಣಿಕಂಠ ಪರಾಭವಗೊಂಡಿದ್ದರು. ಇದಕ್ಕೂ ಮುನ್ನ, ಖರ್ಗೆ ಕುಟುಂಬವನ್ನು ಮುಗಿಸುತ್ತೇನೆ ಎಂದು ಚುನಾವಣಾ ಪ್ರಚಾರದ ವೇಳೆ ಮಣಿಕಂಠ ಹೇಳಿರುವ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದ ಆಡಿಯೋ ಕೂಡ ವೈರಲ್ ಆಗಿತ್ತು. ಈ ಸಂಬಂಧ ಮೇ 6 ರಂದು ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಣಿಕಂಠ ರಾಠೋಡ್ ವಿರುದ್ಧ ದಾಖಲಾಗಿರುವ ದೂರು ಇದು ಮೊದಲನೆಯದ್ದಲ್ಲ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 40 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಕೊಲೆ, ಡ್ರಗ್ಸ್ ಮತ್ತು ಮಾದಕವಸ್ತುಗಳ ಕಳ್ಳಸಾಗಣೆ, ಕ್ರಿಮಿನಲ್ ಬೆದರಿಕೆ, ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಹೊಂದಿರುವುದು ಸೇರಿದಂತೆ ಅನೇಕ ವಿಚಾರಗಳಲ್ಲಿ ಪ್ರಕರಣ ದಾಖಲಾಗಿವೆ.
ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಪ್ರಿಯಾಂಕ್ ಖರ್ಗೆ ಅವರ ಮೇಲೆ ಗುಂಡು ಹಾರಿಸಲು ಸಿದ್ಧ ಎಂದು ಮಣಿಕಂಠ ಅವರು ಹೇಳಿಕೆ ನೀಡಿದ್ದರು. ಈ ಪ್ರಕರಣ ಸಂಬಂಧ ದಾಖಲಾಗಿದ್ದ ದೂರಿನ ಅನ್ವಯ ಪೊಲೀಸರು ಮಣಿಕಂಠರನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿಯಾಗಿದ್ದರು.