ಮಂಗಳೂರು : ನಾಳೆ ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ. ಈ ಹಿನ್ನೆಲೆ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಾಬ್ರಿ ಮಸೀದಿ ಇದ್ದ ಜಾಗವನ್ನು ರಾಮ ಜನ್ಮ ಭೂಮಿ ಎಂದು ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟ ನಂತರದಲ್ಲಿ ಹಿಂದೂ – ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷಗಳು ನಡೆದಿತ್ತು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು ರಾತ್ರಿ 8 ಗಂಟೆಯಿಂದ ಆಗಸ್ಟ್ 6 ರ ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.ಈ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಅಯೋಧ್ಯೆಯಲ್ಲಿ ನಾಳೆ ಭೂಮಿ ಪೂಜೆ ಕಾರ್ಯಕ್ರಮ ಇರುವ ಹಿನ್ನೆಲೆ ಮಂಗಳೂರಿನಲ್ಲಿ ಹಿಂದೂರ ಪರ ಸಂಘಟನೆಗಳು ಸೇರಿದಂತೆ ಸಾರ್ವಜನಿಕರು ವಿಶೇಷ ಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆ ಹಿಂದೂ – ಮುಸ್ಲಿಂ ಸಮುದಾಯಗಳ ನಡುವೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇರುವ ಕಾರಣದಿಂದಾಗಿ ಈ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಈ ರಾಮ ಮಂದಿರ ನಿರ್ಮಾಣ ವಿರೋಧಿಸಿ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುವ ಮಾಹಿತಿಯ ಮೇರೆಗೆ ಈ ಆದೇಶ ಹೊರಡಿಸಲಾಗಿದ್ದು, ನಿಷೇದಾಜ್ಞೆಯ ಸಮಯದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಸೇರದಂತೆ ಸೂಚಿಸಲಾಗಿದೆ. ಇನ್ನು ಯಾರು ಕೂಡ ಕತ್ತಿ, ಚಾಕು, ಕಲ್ಲು ಸೇರಿದಂತೆ ಯಾವುದೇ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಹಾಗೂ ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವಂತಿಲ್ಲ. ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ನಡೆಸಬಾರದು ಹಾಗೂ ಪ್ರಚೋದನಕಾರಿ ಭಾಷಣ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಇನ್ನು ಈ ನಿರ್ಬಂಧಗಳು ಸರ್ಕಾರದ ಅನುಮತಿ ಪಡೆದು ನಡೆಸುವ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹೇಳಿದ್ದಾರೆ.